ಹಾಲಿ ಮತ್ತು ಮಾಜಿ ಸಿಎಂಗಳಿಗೆ ಇಂದು ನಿರ್ಣಾಯಕ ದಿನ ….!

ಬೆಂಗಳೂರು

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ ಕಾನೂನುಬಾಹಿರವಾಗಿ ಕೊಟ್ಟಿದ್ದ 14 ಸೈಟ್​ಗಳ ತನಿಖೆಯನ್ನ ಸಿಬಿಐಗೆ ವಹಿಸಬೇಕೇ ಬೇಡವೇ ಎನ್ನುವ ಬಗ್ಗೆ ಧಾರವಾಡ ಹೈಕೋರ್ಟ್ ಪೀಠ ಇಂದು(ಫೆಬ್ರವರಿ 07) ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿರುವ ಹೈಕೋರ್ಟ್ ಪೀಠ ಇಂದು ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟಿಸಲಿದ್ದು, ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ಅಗತ್ಯವೇ ಇಲ್ಲವೇ ಎಂಬುದನ್ನು ತೀರ್ಮಾನಿಸಲಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ತೀರ್ಪು ಸಹ ಇಂದೇ ಹೊರಬೀಳಲಿದೆ. ಹೀಗಾಗಿ ಈ ಇಬ್ಬರಿಗೆ ಇಂದು ನಿರ್ಣಾಯಕ ದಿನವಾಗಿದ್ದು, ಎಲ್ಲರ ಚಿತ್ತ ಕೋರ್ಟ್​ನತ್ತ ನೆಟ್ಟಿದೆ.

  ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿರುವ ವಕೀಲ ಮಣಿಂದರ್ ಸಿಂಗ್, ಸಿಬಿಐ ತನಿಖೆ ಯಾಕೆ ಅಗತ್ಯ ಎನ್ನುವುದರ ಬಗ್ಗೆ ಉಲ್ಲೇಖ ಮಾಡಿದ್ದಾರೆ. 3ಲಕ್ಷ26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಾಗಿ ದುಬಾರಿ ನಿವೇಶನ ಹಂಚಿಕೆ ಮಾಡಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಜಮೀನು ಭೂಪರಿವರ್ತನೆ ಮಾಡಲಾಗಿದೆ. ಕ್ಯಾಬಿನೆಟ್ ಟಿಪ್ಪಣಿ, ಮುಖ್ಯ ಕಾರ್ಯದರ್ಶಿ ಟಿಪ್ಪಣಿಯೂ ಸಿಎಂ ಪತ್ನಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ಮಣಿಂದರ್ ಸಿಂಗ್ ವಾದ ಮಂಡಿಸಿದ್ದಾರೆ.
   ನಿಯಮಗಳನ್ನು ತಮಗಿಷ್ಟ ಬಂದಂತೆ ತಿರುಚಲಾಗಿದೆ. ಪ್ರಭಾವಿಗಳಿರುವ ಈ ಕೇಸಿನಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಆರೋಪಿ ಮುಖ್ಯಮಂತ್ರಿ ಎಂಬ ಒಂದೇ ಕಾರಣಕ್ಕೆ ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಉದಾಹರಣೆಗಳಿವೆ ಎಂದು ಸ್ನೇಹಮಯಿ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದ್ದಾರೆ.
 
    ಮುಖ್ಯಮಂತ್ರಿ ರಕ್ಷಣೆಗೆ ಇಡೀ ಸಚಿವ ಸಂಪುಟವೇ ಒಟ್ಟಾಗಿರುವಾಗ ಸ್ಥಳೀಯ ಪೊಲೀಸರಿಂದ ಸ್ವತಂತ್ರ ತನಿಖೆ ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯ ಎತ್ತಿಹಿಡಿಯಲು ಸಿಬಿಐ ತನಿಖೆ ಅನಿವಾರ್ಯವಿದ್ದು, ಸ್ವತಂತ್ರ ನ್ಯಾಯಸಮ್ಮತ ತನಿಖೆಯಾಗಬೇಕಿದೆ ಎಂದು ದೂರದಾರ ಸ್ನೇಹಮಯಿ ಪರ ವಕೀಲ ಮಣಿಂದರ್ ಸಿಂಗ್ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.
    ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ಲೋಕಾಯುಕ್ತ ರಾಜ್ಯ ಸರ್ಕಾರದ ಹಿಡಿತದಲ್ಲಿದೆ ಎಂದಿದ್ದಾರೆ. ಆದರೆ ಸಿಬಿಐ ಕೂಡ ಕೇಂದ್ರ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ. ಲೋಕಾಯುಕ್ತ ಸಂಸ್ಥೆ ಕಳಂಕಿತ ಎಂದು ಹೇಳಲು ಆಗಲ್ಲ. ಯಾಕಂದ್ರೆ ಲೋಕಾಯುಕ್ತ ಪೊಲೀಸರ ಮೇಲೆ ಲೋಕಾಯುಕ್ತ ಸಂಸ್ಥೆಯ ನಿಗಾ ಇದೆ. ಹೀಗಾಗಿ ಲೋಕಾಯುಕ್ತ ತನಿಖೆ ಸ್ವತಂತ್ರವಾಗಿರಲಿದೆ ಎಂದು ವಾದ ಮಂಡಿಸಿದ್ದಾರೆ.
 
   ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ತನಿಖೆಗೆ ಅರ್ಹವಾಗಲು ಇದು ಅಪರೂಪದ ಪ್ರಕರಣವಲ್ಲ. ದೂರುದಾರರಿಗೆ ರಾಜ್ಯಪಾಲರ ಅನುಮತಿ ಬೇಕಿತ್ತು ಪಡೆದರು. ಮೊದಲಿಗೆ ಲೋಕಾಯುಕ್ತ ಪೊಲೀಸರ ತನಿಖೆ ಕೋರಿದರು. ತನಿಖೆ ಆಗುವ ಮೊದಲೇ ಸಿಬಿಐ ತನಿಖೆ ಕೇಳುತ್ತಿದ್ದಾರೆ. ಲೋಕಾಯುಕ್ತ ಪೊಲೀಸರ ತನಿಖೆಯ ಲೋಪವೇನೆಂದು ಹೇಳಿಲ್ಲ. ಆರೋಪಿ ಸ್ಥಾನದಲ್ಲಿ ಸಿಎಂ ಇದ್ದಾರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದು ತಪ್ಪು ಮೇಲ್ಪಂಕ್ತಿಗೆ ಕಾರಣವಾಗುತ್ತೆ ಎಂದು ಕೋರ್ಟ್​ಗೆ ತಿಳಿಸಿದ್ದಾರೆ.
   ಮುಡಾ ಹಗರಣ ಸಂಬಂಧ ಮುಡಾದ 160 ನಿವೇಶನಗಳ ಜಪ್ತಿಗೆ ಜಾರಿ ನಿರ್ದೇಶನಾಲಯ ಆದೇಶ ಹೊರಡಿಸಿದ ಬೆನ್ನಲ್ಲೇ ಈಗ ಮತ್ತೆ 812 ನಿವೇಶನಗಳನ್ನು ಜಪ್ತಿ ಮಾಡಲು ಮುಂದಾಗಿದೆ. 812 ನಿವೇಶನ ಸಂಬಂಧ ಯಾರೊಬ್ಬರ ಹೆಸರಿಗೆ ಪರಭಾರೆ ಇಲ್ಲವೇ ನೋಂದಣಿ ಮಾಡದಂತೆ ಮೈಸೂರಿನ ಎಲ್ಲಾ ಉಪ ನೋಂದಣಾಧಿಕಾರಿಗಳ ಕಚೇರಿ ಹಾಗೂ ಮುಡಾ ಆಯುಕ್ತರಿಗೆ ಇ.ಡಿ ಪತ್ರ ಬರೆದಿದೆ. ಮುಡಾದ ಮಾಜಿ ಆಯುಕ್ತ ನಟೇಶ್‌ರ ಅಧಿಕಾರಾವಧಿಯಲ್ಲಿ ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
   ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ತೀರ್ಪು ಸಹ ಇಂದು ಪ್ರಕಟವಾಗಲಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದು, ಇಂದು ಬೆಳಗ್ಗೆ 10.30ಕ್ಕೆ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಅಂತಿಮ ತೀರ್ಪು ನೀಡಲಿದೆ. ಹೀಗಾಗಿ ಬಿಎಸ್​ವೈಗೆ ಟೆನ್ಷನ್ ಶುರುವಾಗಿದೆ.
   ಬಿ.ಎಸ್. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್​ ಹಾಗೂ ಸರ್ಕಾರದ ಪರ ಹಿರಿಯ ವಕೀಲ ಪ್ರೋ. ರವಿವರ್ಮ ಕುಮಾರ್ ವಾದ ಮಂಡಿಸಿದ್ದು. ಈವರೆಗೆ ಖುದ್ದು ಹಾಜರಾತಿಯಿಂದ ಬಿಎಸ್‌ವೈಗೆ ಕೋರ್ಟ್​ ವಿನಾಯಿತಿ ನೀಡಿತ್ತು. ಅಲ್ಲದೇ ಬಂಧನದಿಂದಲೂ ಮಧ್ಯಂತರ ರಕ್ಷಣೆ ಸಹ ನೀಡಿತ್ತು. ಆದ್ರೆ, ಏನು ತೀರ್ಪು ನೀಡಲಿದೆ ಎನ್ನುವುದು ಕಾದುನೋಡಬೇಕಿದೆ.

Recent Articles

spot_img

Related Stories

Share via
Copy link