ಖಾಲಿ ಇರುವ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ:

    ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

   ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಸನ್ಮಾನಿಸಲು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು.

   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಹೇಳಿದರು.

   ನನಗೆ ಒಂದು ವರ್ಷದ ಸಮಯ ಕೊಡಿ. ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ ಚಿತ್ತಾಪುರ ಕ್ಷೇತ್ರದ ಚಿತ್ರಣವನ್ನೇ ಬದಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ. ಎಲ್ಲಾ ಚುನಾವಣೆಗಳಲ್ಲಿ ನನ್ನನ್ನು ಬೆಂಬಲಿಸುತ್ತಿರುವ ಚಿತ್ತಾಪುರ ಕ್ಷೇತ್ರದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆಂದು ತಿಳಿಸಿದರು.

   ಇದೇ ವೇಳೆ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 7 ಸಾವಿರ ಕೋಟಿ ರೂ ನೀಡಲಾಗಿದೆ. ಅದರಲ್ಲೂ ರೂ.300ಕೋಟಿಯನ್ನು ಚಿತ್ತಾಪುರ ಕ್ಷೇತ್ರಕ್ಕೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯ 30 ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ವಾಡಿಯ ಸರ್ವಾಂಗೀಣ ಅಭಿವೃದ್ಧಿಗೆ ಅಂದಾಜು 25 ಕೋಟಿ ರೂ.ಗಳ ಯೋಜನೆಯನ್ನೂ ಸಿದ್ಧಪಡಿಸಲಾಗಿದೆ. ಚಿತ್ತಾಪುರ ಪಟ್ಟಣದಲ್ಲಿ ಮೃಗಾಲಯ ಹಾಗೂ ವಿಜ್ಞಾನ ಕೇಂದ್ರ ತೆರೆಯುವ ಯೋಜನೆಯೂ ಇದೆ ಎಂದು ಹೇಳಿದರು.

Recent Articles

spot_img

Related Stories

Share via
Copy link
Powered by Social Snap