ಭೋಪಾಲ್:
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.
ಸೋಮವಾರ ಜಬಲ್ಪುರ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 1,500 ರೂ. ಸಹಾಯಧನ, ಪ್ರತಿ ಮನೆಗೆ 500 ರೂ. ದರದಲ್ಲಿ ಎಲ್ಪಿಜಿ, 100 ಯೂನಿಟ್ ಉಚಿತ ವಿದ್ಯುತ್, ರೈತರ ಸಾಲ ಮನ್ನಾ, ಹಳೆ ಪಿಂಚಣಿ ಪದ್ದತಿ ಸೇರಿದಂತೆ ಅನೇಕ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಿಯಾಂಕ ನಾವು ಅಧಿಕಾರದಲ್ಲಿದ್ದ ಸಮಯದಲ್ಲಿ ಮಧ್ಯಪ್ರದೇಶದಲ್ಲಿ ಹಲವು ಅಭಿವೃದ್ದಿ ಕಾರತ್ಯಗಳನ್ನು ಮಾಡಿದ್ದೇವೆ. ಆದರೆ, ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಿ ಹಿಂಬಾಗಿಲಿನಿಂದ ಅಧಿಕಾರವನ್ನು ಹಿಡಿದಿದ್ಧಾರೆ ಎಂದು ಕಿಡಿಕಾರಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ತನ್ನ ಕೆಲಸಗಳಿಗಿಂತ ಹಗರಣಗಳಿಗೆ ಹೆಚ್ಚು ಹೆಸರುವಾಸಿಯಾಗಿದೆ. ಕಳೆದ 220 ತಿಂಗಳ ಆಡಳಿತದಲ್ಲಿ 225ಕ್ಕೂ ಹೆಚ್ಚು ಹಗರಣಗಳು ನಡೆದಿವೆ. ಕಳೆದ 18 ವರ್ಷಗಳಿಂದ ಮುಖ್ಯಮಂತ್ರಿಯಾಗೊಇರುವ ಶಿವರಾಜ್ ಸಿಂಗ್ ಚೌಹಾಣ್ 22 ಸಾವಿರ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅದ್ಯಾವುದನ್ನು ಅನುಷ್ಠಾನಕ್ಕೆ ತಂದಿಲ್ಲ ಅವರೊಬ್ಬ ಘೋಷಣಾ ವೀರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಬಲ್ಪುರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ