ಬೆಳಗಾವಿ:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ತನ್ನಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ಸಂಪುಟದ ಸಚಿವರು ನೀಡಿರುವ ಸಲಹೆಯನ್ನು ಒಂದು ವೇಳೆ ರಾಜ್ಯಪಾಲರು ತಿರಸ್ಕರಿಸಿದರೆ. ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು.
ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು, ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣಾ ಎಂದರು. ವಕೀಲ- ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿರುವ ಅರ್ಜಿ ಆಧರಿಸಿ, ರಾಜ್ಯಪಾಲರು ಜುಲೈ 26 ರಂದು ಶೋಕಾಸ್ ನೋಟಿಸ್ ನೀಡಿದ್ದು, ತಮ್ಮ ವಿರುದ್ಧದ ಆರೋಪಗಳಿಗೆ ಏಳು ದಿನಗಳೊಳಗೆ ಉತ್ತರ ಸಲ್ಲಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ್ದಾರೆ.
ಈ ಮಧ್ಯೆ ಇದೇ ವಿಚಾರ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂಬ ಸಂಟುಪ ಸಚಿವರ ಸಲಹೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ರಾಜ್ಯಪಾಲರು ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿದರೆ ಕಾಂಗ್ರೆಸ್ ಸರ್ಕಾರ ಕಾನೂನಾತ್ಮಕವಾಗಿ ಹೋರಾಟ ನಡೆಸಲಿದೆ ಎಂದರು.
ರಾಜ್ಯಪಾಲರು ಕೆಲವು ಅಧಿಕಾರಗಳನ್ನು ಹೊಂದಿರಬಹುದು, ಆದರೆ ಅವರು ಕ್ಯಾಬಿನೆಟ್ ಸಲಹೆಯನ್ನು ಅಷ್ಟು ಸುಲಭವಾಗಿ ತಿರಸ್ಕರಿಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದಾಗ್ಯೂ, ಅವರು ಕಾನೂನು ಕ್ರಮಕ್ಕೆ ಅನುಮತಿ ನೀಡಿದರೆ, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.