ಮಾ. 9 ರಿಂದ ಪಿಯು ಪರೀಕ್ಷೆ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಉತ್ತೇಜನ ನೀಡಿದಲ್ಲಿ ಕಠಿಣ ಕ್ರಮ

ತುಮಕೂರು

     ಜಿಲ್ಲೆಯಲ್ಲಿ ಮಾರ್ಚ್ 9 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಉತ್ತೇಜನ ನೀಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಖಡಕ್ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ 35 ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

     ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷೆ ಪಾವಿತ್ರö್ಯತೆ ಕಾಯ್ದುಕೊಂಡು ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

    ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲಾಗಿದೆ.

    ಪರೀಕ್ಷಾ ದಿನಗಳಂದು ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗುವುದು. ನಿರ್ಬಂಧಿತ ಪ್ರದೇಶಗಳಿಗೆ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು ಎಂದು ತಿಳಿಸಿದರು.

   ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ. ಬಸವಲಿಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 12889 ವಿದ್ಯಾರ್ಥಿಗಳು ಹಾಗೂ 14968 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 27857 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ. ಈ ಪೈಕಿ 24386 (10932 + 13454) ಹೊಸ ವಿದ್ಯಾರ್ಥಿಗಳು, 2925 (1718 + 1207) ಪುನರಾವರ್ತಿತ, 546 (239 + 307) ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

   ಅದೇ ರೀತಿ ವಿಜ್ಞಾನ ವಿಭಾಗದಲ್ಲಿ 3578 ವಿದ್ಯಾರ್ಥಿಗಳು ಹಾಗೂ 5120 ವಿದ್ಯಾರ್ಥಿನಿಯರು ಸೇರಿದಂತೆ 8698, ವಾಣಿಜ್ಯ ವಿಭಾಗದಲ್ಲಿ 4008 ವಿದ್ಯಾರ್ಥಿಗಳು ಹಾಗೂ 5452 ವಿದ್ಯಾರ್ಥಿನಿಯರು ಸೇರಿದಂತೆ 9460, ಕಲಾ ವಿಭಾಗದಲ್ಲಿ 3346 ವಿದ್ಯಾರ್ಥಿಗಳು ಹಾಗೂ 2882 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 6228 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್, ವಿವಿಧ ತಾಲ್ಲೂಕಿನ ತಹಶೀಲ್ದಾರರು, ಉಪ ವಿಭಾಗಾಧಿಕಾರಿ ಹೆಚ್. ಶಿವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯ ಅಧೀಕ್ಷಕರು, ಪ್ರಾಚಾರ್ಯರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link