ನವದೆಹಲಿ:
ಸುಪ್ರೀಂ ಕೋರ್ಟ್‌ನಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿರುವಾಗ ಪ್ರಧಾನಿ ನರೇಂದ್ರ ಮತ್ತು ಗೃಹ ಸಚಿವರು ಮಧ್ಯರಾತ್ರಿ ಹೊಸ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರನ್ನು ಆಯ್ಕೆ ಮಾಡುವ ಮೂಲಕ “ಅಗೌರವ” ತೋರಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಸಮಿತಿ ಸದಸ್ಯ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಸಭೆ ನಡೆದ ಕೆಲವೇ ಗಂಟೆಗಳ ನಂತರ ಸೋಮವಾರ ತಡರಾತ್ರಿ ಕೇಂದ್ರ ಸರ್ಕಾರ ಜ್ಞಾನೇಶ್ ಕುಮಾರ್ ಅವರನ್ನು ಹೊಸ ಮುಖ್ಯ ಚುನಾವಣಾ ಆಯುಕ್ತರನ್ನಾಗಿ(ಸಿಇಸಿ) ನೇಮಿಸಿದೆ.
ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ರೂಪಿಸಲಾಗಿರುವ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವವರೆಗೆ ಹೊಸ ಸಿಇಸಿ ನೇಮಕ ನಿರ್ಧಾರವನ್ನು ಮುಂದೂಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಸುಪ್ರೀಂ ಕೋರ್ಟ್ ಬುಧವಾರ ಪ್ರಕರಣದ ವಿಚಾರಣೆ ನಡೆಸಲಿದೆ.
“ಮುಂದಿನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಆಯ್ಕೆ ಸಮಿತಿ ಸಭೆಗೆ ನನ್ನ ಅಸಮ್ಮತಿ ಸೂಚಿಸಿ, ನಾನು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಅದರಲ್ಲಿ ಸಿಇಸಿ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಕಾರ್ಯಾಂಗದ ಹಸ್ತಕ್ಷೇಪ ಮಾಡಬಾರದು ಎಂದು ಉಲ್ಲೇಖಿಸಿರುವುದಾಗಿ ರಾಹುಲ್ ಗಾಂಧಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಸಮಿತಿಯಿಂದ ತೆಗೆದುಹಾಕುವ ಮೂಲಕ, ಮೋದಿ ಸರ್ಕಾರವು ನಮ್ಮ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯ ಬಗ್ಗೆ ಲಕ್ಷಾಂತರ ಮತದಾರರ ಕಳವಳವನ್ನು ಹೆಚ್ಚಿಸಿದೆ” ಎಂದು ರಾಹುಲ್ ಗಾಂಧಿ ತಾವು ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಮಾರ್ಚ್ 2, 2023 ರಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಿಇಸಿ ಮತ್ತು ಚುನಾವಣಾ ಆಯುಕ್ತರ ನೇಮಕಾತಿಯನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿ ಕೈಗೊಳ್ಳಬೇಕು ಎಂದು ಆದೇಶಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ನಮ್ಮ ದೇಶದ ನಾಯಕರ ಆದರ್ಶಗಳನ್ನು ಎತ್ತಿಹಿಡಿಯುವುದು ಮತ್ತು ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ನನ್ನ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
