ನವದೆಹಲಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿದ ನಂತರ ಎರಡು ಸ್ಥಾನಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎನ್ನುವ ಕುರಿತಾದ ನಿರ್ಧಾರವನ್ನು ಸೋಮವಾರ ಪ್ರಕಟಿಸಿದ್ದರು.
ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ.
ರಾಹುಲ್ ಗಾಂಧಿ ಅವರು ಗೆದ್ದಿದ್ದ ಎರಡು ಸ್ಥಾನಗಳಲ್ಲಿ ಒಂದಕ್ಕೆ ರಾಜೀನಾಮೆ ನೀಡಿದ ನಂತರ, ಸಂಸತ್ತಿನ ಕೆಳಮನೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಈಗ 98 ಆಗಿದೆ. ಇದೀಗ ರಚನೆಯಾದ 18ನೇ ಲೋಕಸಭೆಯಲ್ಲಿ ಇದು ಮೊದಲ ಖಾಲಿ ಹುದ್ದೆಯಾಗಿದೆ.
‘ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಸಂಸದೀಯ ಕ್ಷೇತ್ರಗಳಿಂದ ಲೋಕಸಭೆಗೆ ಚುನಾಯಿತರಾದ ರಾಹುಲ್ ಗಾಂಧಿ ಅವರು ಲೋಕಸಭೆಯ ಕೇರಳದ ವಯನಾಡ್ ಸಂಸದೀಯ ಕ್ಷೇತ್ರದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೂನ್ 18 ರಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ’ ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ.








