ಬೆಂಗಳೂರು:
2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.
ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿತ್ತು. ಇದೀಗ ಅದೇ ಪ್ರಕರಣದಲ್ಲಿ ನಾಳೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.
2023 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಂದಿನ ಆಡಳಿತಾರೂಢ ಬಿಜೆಪಿಯನ್ನು ಭ್ರಷ್ಟ ಎಂದು ಲೇಬಲ್ ಮಾಡುವ ಜಾಹೀರಾತುಗಳನ್ನು ಪ್ರಕಟಿಸಿತ್ತು. 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೋರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.
2023 ರ ಮೇ 5 ರಂದು ಕಾಂಗ್ರೆಸ್ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿತ್ತು. ಅದರಲ್ಲಿ, ಬಿಜೆಪಿ ಸರ್ಕಾರ ಕೋವಿಡ್ ಕಿಟ್ ಟೆಂಡರ್ ಡೀಲ್‌ಗಳಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಟೆಂಡರ್‌ಗಳಿಗೆ ಶೇಕಡಾ 40, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮತ್ತು ಇತರ ವ್ಯವಹಾರಗಳಿಗೆ ಶೇಕಡಾ 30 ರಷ್ಟು ಕಮಿಷನ್ ಪಡೆದಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.