ಸುಲ್ತಾನ್‌ಪುರ:
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಂಗಳವಾರ ಜೂನ್ 26ಕ್ಕೆ ಮುಂದೂಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರ್ಜಿದಾರರ ಪರ ವಕೀಲರಾದ ಸಂತೋಷ್ ಕುಮಾರ್ ಪಾಂಡೆ ಅವರು, ಮಂಗಳವಾರದಂದು ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26 ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು.
ಈ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಫೆಬ್ರವರಿ 20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.
ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಗಸ್ಟ್ 4, 2018 ರಂದು ದೂರು ದಾಖಲಿಸಲಾಗಿದೆ.
ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕೊಲೆ ಪ್ರಕರಣದಲ್ಲಿ “ಆರೋಪಿ”ಯಾಗಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿರುವುದಾಗಿ ದೂರುದಾರರು ಉಲ್ಲೇಖಿಸಿದ್ದಾರೆ.