ನವದೆಹಲಿ:
ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಾಳೆ ಸೂರತ್ ಕೋರ್ಟ್‌ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಾಷ್ಟ್ರ ರಾಜಧಾನಿಯ ಹೋಟೆಲ್‌ವೊಂದರಲ್ಲಿ ಸೋನಿಯಾ ಗಾಂಧಿ ಅವರನ್ನು ರಾಹುಲ್ ಭೇಟಿಯಾಗಿದ್ದು, ಸುಮಾರು ಒಂದೂವರೆ ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸೋದರ ಮಾವ ರಾಬರ್ಟ್ ವಾದ್ರಾ ಕೂಡ ಇದ್ದರು.
ಪ್ರಧಾನಿ ಮೋದಿ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿ ನಾಳೆ ಗುಜರಾತ್ ನ ಸೂರತ್ ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ, ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ.
ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆಗೆ ಬಿಜೆಪಿ ಶಾಸಕ ಮತ್ತು ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ, ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ದಾಖಲಿಸಿರುವ ಮತ್ತೊಂದು ಮಾನನಷ್ಟ ಮೊಕದ್ದಮೆಯನ್ನು ಗಾಂಧಿ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ತನ್ನ ಮುಂದೆ ಹಾಜರಾಗುವಂತೆ ಪಾಟ್ನಾ ನ್ಯಾಯಾಲಯವು ಕಾಂಗ್ರೆಸ್ ನಾಯಕನಿಗೆ ಸೂಚಿಸಿದೆ ಎಂದು ವರದಿಯಾಗಿದೆ.
