ಬೆಂಗಳೂರು:
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಸಲ್ಲಿಸಿರುವ ಚಾರ್ಜ್‌ಶೀಟ್ ನಲ್ಲಿ ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರು ಕೆಂಗಣ್ಣು ಬೀರಿರುವುದು ಬಹಿರಂಗವಾಗುತ್ತಿದ್ದಂತೆಯೇ ಇತ್ತ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಪಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.ಕಚೇರಿ ಪ್ರವೇಶಿಸುವವರು ಈ ಮೆಟಲ್ ಡಿಟೆಕ್ಟರ್ ಮೂಲಕವೇ ಪ್ರವೇಶಿಸುವಂತೆ ಸೂಚಿಸಲಾಗಿದೆ. ಜೊತೆಗೆ ನಿತ್ಯ ಮಲ್ಲೇಶ್ವರ ಪೊಲೀಸ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ನಿಗಾ ವಹಿಸುವಂತೆಯೂ ಸೂಚಿಸಲಾಗಿದೆ.
ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಶಂಕಿತ ಉಗ್ರರು ಬಿಜೆಪಿ ರಾಜ್ಯ ಘಟಕದ ಕಚೇರಿಯನ್ನೂ ಗುರಿಯಾಗಿಸಿಕೊಂಡಿದ್ದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿ ಕಚೇರಿಗೆ ಭದ್ರತೆ ಒದಗಿಸಿದ್ದಾರೆ.
ಸಾಮಾನ್ಯವಾಗಿ ಪಕ್ಷದ ಸಭೆ, ಸಮಾರಂಭ ಹಾಗೂ ಗಣ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಮಾತ್ರ ಕಚೇರಿಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುತ್ತಿತ್ತು. ಈಗ ಕಾಯಂ ಆಗಿ ಅಳವಡಿಸಿ, ಕಚೇರಿಗೆ ಬರುವವರನ್ನೆಲ್ಲ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ನಿಷೇಧಿತ ವಸ್ತುಗಳನ್ನು ಪ್ರವೇಶ ದ್ವಾರದಲ್ಲೇ ಪತ್ತೆ ಹಚ್ಚಲಾಗುತ್ತದೆ. ಇದಕ್ಕಾಗಿಯೇ ಒಬ್ಬರು ಸಹಾಯಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಮೂವರು ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ. ಗಂಟೆಗೊಮ್ಮೆ ಠಾಣಾಧಿಕಾರಿ ಭೇಟಿ ನೀಡುತ್ತಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದಲ್ಲದೆ, ಬಿಜೆಪಿ ಕಚೇರಿ ಮುಂಭಾಗ ಕೆಎಸ್‌ಆರ್‌ಪಿ ವಾಹನ (20 ಸಿಬ್ಬಂದಿ) ನಿಯೋಜಿಸಲಾಗಿದ್ದು, ಪಕ್ಷದ ವತಿಯಿಂದ ಆರು ಮಂದಿ ಖಾಸಗಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಕಚೇರಿ ಸುತ್ತಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ಕಂಡರೆ ತಕ್ಷಣ ಮಾಹಿತಿ ನೀಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಕಚೇರಿಗೆ ಬರುವವರಲ್ಲಿ ಕಾರ್ಯಕರ್ತರು, ಮುಖಂಡರು ಯಾರು ಎಂಬುದನ್ನು ಗುರುತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕಚೇರಿಗೆ ಎಲ್ಲಾ ರೀತಿಯ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರೂಕ್ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿದ್, ಅಬ್ದುಲ್ ಮತೀನ್ ತಾಹ, ಮಾಜ್ ಮುನೀರ್ ಅಹಮದ್, ಮುಜಾಮಿಲ್ ಷರೀಫ್ ವಿರುದ್ಧ ಎನ್ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆರೋಪ ಪಟ್ಟಿಯಲ್ಲಿ ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚನ್ನು ಇಸಿಸ್ ಉಗ್ರ ಸಂಘಟನೆಯ ಶಂಕಿತ ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಅಂಶ ಬಯಲಾಗಿದೆ. ಬಿಜೆಪಿ ಕಚೇರಿ ಉಗ್ರರ ಟಾರ್ಗೆಟ್ ಆಗಿತ್ತು ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಇದೀಗ ಹಲವು ನಾಯಕರದಲ್ಲಿ ಆತಂಕ ಹೆಚ್ಚಾಗಿದೆ.