ರಾಮನಗರಕ್ಕೆ ಮರು ನಾಮಕರಣ ಮಾಡಲು ಚಿಂತನೆ ಇದೆ:ಡಿ ಸಿ ಎಂ

ಬೆಂಗಳೂರು:

    ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

    ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದಿದ್ದಾರೆ.

    ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ಹೇಳಿದ್ದಾರೆ.

   ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap