ಬಳ್ಳಾರಿ:
ಇತ್ತೀಚೆಗಷ್ಟೇ ಬಿಜೆಪಿಗೆ ಮರಳಿ ಸೇರ್ಪಡೆಗೊಂಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಸ್ನೇಹಿತ ಶ್ರೀರಾಮುಲು ಬರ ಡಿಜಿಟಲ್ ಪ್ರಚಾರ ಆರಂಭಿಸಲು ಸಿದ್ಧತೆ ಆರಂಭಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಯವರು ಡಿಜಿಟಲ್ ಮೂಲಕ ಪ್ರಚಾರ ನಡೆಸಲಿದ್ದಾರೆ.
ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದರು. ಬಳಿಕ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಈ ವೇಳೆ ಬಳ್ಳಾರಿ ನಗರದಲ್ಲಿ ಪ್ರಚಾರ ವಾಹನವನ್ನು ಬಳಕೆ ಮಾಡಿದ್ದರು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೆಡ್ಡಿ ಮರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಮೂಲಕ ಪ್ರಚಾರ ನಡೆಸಿ, ತಮ್ಮ ಬೆಂಬಲಿಗರೊಂದಿಗೆ ಸಂಪರ್ಕ ಸಾಧಿಸಲು ಯತ್ನಿಲು ಮುಂದಾಗಿದ್ದಾರೆ.
ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರು ಮಾತನಾಡಿ, ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ನನ್ನ ಗೆಲುವಿನ ಅಂತರ ಖಂಡಿತವಾಗಿಯು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ರೆಡ್ಡಿಗೆ ನಿರ್ಬಂಧ ಹೇರಿದೆ. ಆದರೆ, ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಪರ ಪ್ರಚಾರ ನಡೆಸಲು ಅವಕಾಶವಿದೆ. ಈ ಮೂಲಕ ಬಳ್ಳಾರಿ ಜನತೆಯೊಂದಿಗೆ ಸಂಪರ್ಕ ಸಾಧಿಸುತ್ತಾರೆ. ಕಳೆದ ವಾರ ಕೆಆರ್‌ಪಿಪಿಯನ್ನು ಬಿಜೆಪಿಯೊಂದಿಗೆ ಅಧಿಕೃತವಾಗಿ ವಿಲೀನಗೊಳಿಸಲಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.