ಹೊಸದಿಲ್ಲಿ:
ರಾಷ್ಟ್ರ ರಾಜಧಾನಿ ದಿಲ್ಲಿಯ ಮುಖ್ಯಮಂತ್ರಿ ಯಾರಾಗ್ತಾರೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ . ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ನೂತನವಾಗಿ ಆಯ್ಕೆಯಾದ ಶಾಸಕರು ಪಕ್ಷದ ಕಚೇರಿಯಲ್ಲಿ ಬುಧವಾರ (ಫೆ. 19) ಸಭೆ ಸೇರಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದಾರೆ. ಆ ಮೂಲಕ ಫಲಿತಾಂಶ ಘೋಷಣೆಯಾಗಿ ಸುಮಾರು 11 ದಿನಗಳ ಬಳಿಕ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗಿದೆ.
ಇನ್ನು ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಗೆ ಫೆ. 5ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು ಫೆ. 8ರಂದು ಫಲಿತಾಂಶ ಘೋಷಣೆಯಾಗಿತ್ತು.
ನಾಳೆ ಪ್ರಮಾಣ ವಚನ ಸ್ವೀಕಾರ
ಇನ್ನು ಮುಖ್ಯಮಂತ್ರಿ ಸೇರಿದಂತೆ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಗುರುವಾರ (ಫೆ. 20) ಸಮಾರಂಭ ನಡೆಯಲಿದೆ. ರಾಮಲೀಲಾ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಹಲವು ಬಿಜೆಪಿ ನಾಯಕರು, ಕೇಂದ್ರ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 48 ಕ್ಷೇತ್ರಗಳಲ್ಲಿ ಗೆದ್ದು, 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. ಆ ಮೂಲಕ 10 ವರ್ಷಗಳ ಆಪ್ ಆಡಳಿತ ಕೊನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ದಿಲ್ಲಿ ಗದ್ದುಗೆ ವಿಶೇಷ ಎನಿಸಿಕೊಂಡಿದೆ.
