ನವದೆಹಲಿ:
ದೆಹಲಿಯಲ್ಲಿ 27 ವರ್ಷಗಳ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರಕ್ಕೆ ಬಂದಿದ್ದು, ನೂತನ ಸಿಎಂ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುರುವಾರ ರಾಮಲೀಲಾ ಮೈದಾನದಲ್ಲಿ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಆಗಿ ರೇಖಾ ಗುಪ್ತಾ, ಡಿಸಿಎಂ ಆಗಿ ಪರ್ವೇಶ್ ವರ್ಮ ಹಾಗೂ ಐವರು ಸಚಿವರು ಪ್ರಮಾಣ ವಚನ ಸ್ವೀಕರಿದರು. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ನೂತನ ಸಿಎಂ ಹಾಗೂ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ರೇಖಾ ಗುಪ್ತಾ ದೆಹಲಿಯ 9ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದು, ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಅವರದ್ದಾಗಿದೆ.
ಇನ್ನು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಮತ್ತು ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಮತ್ತು ಎನ್ಡಿಎ ಮಿತ್ರಪಕ್ಷಗಳ ಉನ್ನತ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
