ಮೇಕೆದಾಟು ಯೋಜನೆ ಜಾರಿಗೆ ಆಗ್ರಹ

ಬೆಂಗಳೂರು:

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್‍ನಿಂದ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಯೋಜನೆ ಜಾರಿಗೆ ಬೇರೆ ಯಾವ ತಕರಾರು ಇಲ್ಲದ ಕಾರಣ ರಾಜ್ಯ ಸರ್ಕಾರ ಕೂಡಲೇ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡಿನವರು ಸುಮ್ಮನೆ ಕ್ಯಾತೆ ತೆಗೆಯುತ್ತಿದ್ದಾರೆ. ಆದರೆ ಅವರಿಗೆ ಈ ಯೋಜನೆಯಿಂದ ಯಾವುದೇ ತೊಂದರೆಯಾಗಲ್ಲ, ಒಂದಷ್ಟು ಲಾಭವಾಗುತ್ತದೆ. ವಿದ್ಯುತ್ ಉತ್ಪಾದನೆ, ಬೆಂಗಳೂರಿಗೆ ಕುಡಿಯುವ ನೀರಿನ ಜೊತೆಗೆ ಮೇಕೆದಾಟು ಅಣೆಕಟ್ಟಿನಲ್ಲಿ ನೀರು ಶೇಖರಣೆ ಆಗುವುದರಿಂದ ತಮಿಳುನಾಡಿನಲ್ಲಿ ನೀರಿನ ಅಭಾವ ಇದ್ದಾಗ ಅವರಿಗೆ ಅದನ್ನು ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ ಎಂದರು.

ಯೋಜನೆ ಅನುಷ್ಠಾನವಾದ ಮೇಲೆ ಕೂಡ ಕಾವೇರಿ ಪ್ರಾಧಿಕಾರವು ನ್ಯಾಯಾಲಯದ ಆದೇಶದ ಅನುಸಾರ ತಮಿಳುನಾಡಿನ ಪಾಲಿನ ನೀರನ್ನು ಅವರಿಗೆ ಬಿಡುತ್ತದೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ವಿನಃ ಬೇರೆ ಯಾವ ಕಾರಣಗಳು ಇಲ್ಲ ಎಂದು ಹೇಳಿದರು.

ಇದು ಕರ್ನಾಟಕದ ಗಡಿ ಒಳಗಡೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆ, ತಮಿಳುನಾಡಿನವರಿಗೆ ಅವರ ಪಾಲಿನ ನೀರನ್ನು ಪಡೆಯಲು ಮಾತ್ರ ಹಕ್ಕಿದೆ. ನಾವು ಪ್ರವಾಹದ ನೀರನ್ನು ಶೇಖರಣೆ ಮಾಡಿಟ್ಟು, ಅದರ ಸದ್ಬಳಕೆ ಮಾಡಿಕೊಂಡರೆ ತಮಿಳುನಾಡಿಗೇನು ತೊಂದರೆ? ಸಮುದ್ರದ ಪಾಲಾಗುತ್ತಿರುವ ಹೆಚ್ಚುವರಿ ನೀರನ್ನು ಸದುಪಯೋಗ ಮಾಡಿಕೊಳ್ಳಲು ರೂಪಿಸಿರುವ ಯೋಜನೆ ಇದಾಗಿದೆ ಎಂದರು.

ಮೇಕೆದಾಟು ಯೋಜನೆ ಜಾರಿ ಮಾಡಲು ನಮ್ಮ ರಾಜ್ಯಕ್ಕೆ ಕಾನೂನಾತ್ಮಕ ಸೇರಿದಂತೆ ಎಲ್ಲ ರೀತಿಯ ಹಕ್ಕುಗಳಿವೆ. ಸರ್ವೋಚ್ಛ ನ್ಯಾಯಾಲಯದ ಅಥವಾ ಇತರೆ ಯಾವುದೇ ತಕರಾರುಗಳು ಇಲ್ಲ. ಹೀಗಾಗಿ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪರಿಸರ ಇಲಾಖೆಯು ಕೂಡಲೇ ಅನುಮತಿ ಪತ್ರ ನೀಡಬೇಕು ಹಾಗೂ ರಾಜ್ಯ ಸರ್ಕಾರ ಕೂಡಲೇ ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ನಗರದ ವರೆಗೆ ಪಾದಯಾತ್ರೆ ನಡೆಸುತ್ತೇವೆ. ಇನ್ನೆರಡು ದಿನದಲ್ಲಿ ನಿರ್ದಿಷ್ಟ ದಿನಾಂಕವನ್ನು ಘೋಷಣೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಚುನಾವಣೆಗಾಗಿ ಅಥವಾ ಮತ ಗಳಿಕೆಗಾಗಿ ನಾವು ಪಾದಯಾತ್ರೆ ಮಾಡುತ್ತಿಲ್ಲ. ನಮ್ಮ ಸರ್ಕಾರ ಮೇಕೆದಾಟು ಯೋಜನೆ ಯನ್ನು ರೂಪಿಸಿ, ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಕೇಂದ್ರ ಸರ್ಕಾರ ಅನುಮತಿ ನೀಡದ ಕಾರಣಕ್ಕೆ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ಈ ಹಿಂದೆ ಪಾದಯಾತ್ರೆ ನಡೆಸಿ, ನಾವು ಅಧಿಕಾರಕ್ಕೆ ಬಂದರೆ ಸುಮಾರು 50,000 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಹೇಳಿದ್ದೆವು. ನಂತರ 2013 ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ವಾರ್ಷಿಕ ಹತ್ತು ಸಾವಿರ ಕೋಟಿ ರೂಪಾಯಿಯಂತೆ ಐದು ವರ್ಷಗಳಲ್ಲಿ ರೂ. 50,000 ಕೋಟಿಗೂ ಅಧಿಕ ಹಣವನ್ನು ನೀರಾವರಿ ಉದ್ದೇಶಕ್ಕೆ ಖರ್ಚು ಮಾಡಿದ್ದೆವು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ನಮಗೆ ನಾಡಿನ ರೈತರ ಮತ್ತು ಜನರ ಹಿತ ಮುಖ್ಯ ಎಂದರು.

ಸಿ.ಟಿ ರವಿ ತಾವು ಭಾರತದ ಪರ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಕನ್ನಡಿಗರ ಪರ, ಕರ್ನಾಟಕದ ಪರ ಇದ್ದೇವೆ. ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು ಎಂಬುದು ನಮ್ಮ ಒತ್ತಾಯ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link