ದೆಹಲಿ:
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
‘ಎಲ್ಲ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡುವ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನೀಡಿದ ತೀರ್ಪು ಅವೈಜ್ಞಾನಿಕ ಮತ್ತು ಆಧಾರರಹಿತ. ತೀರ್ಪಿನ ಮರುಪರಿಶೀಲನೆ ಮಾಡಬೇಕು’ ಎಂದು ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘದ (ನ್ಯಾಷನಲ್ ಅಯ್ಯಪ್ಪ ಡಿವೋಟಿಸ್ ಅಸೋಸಿಯೇಷನ್) ಅಧ್ಯಕ್ಷೆ ಶೈಲಜಾ ವಿಜಯನ್ ಅವರು ವಕೀಲ ಮ್ಯಾಥ್ಯೂ ಜೆ.ನೆಡುಂಪರಾ ಅವರ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಅಂಗೀಕರಿಸಿತು.
ಮೇಲ್ಮನವಿಯ ತುರ್ತು ವಿಚಾರಣೆಯ ಅಗತ್ಯವಿಲ್ಲ. ಅದನ್ನು ನಿಧಾನವಾಗಿ ವಿಚಾರಣೆ ನಡೆಸಲಾಗುವುದು ಎಂದಿರುವ ಕೋರ್ಟ್, ತುರ್ತು ವಿಚಾರಣೆಯ ಮನವಿಯನ್ನು ತಳ್ಳಿಹಾಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ