ಸಾವರ್ಕರ್ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚನೆ

ಪುಣೆ

   ವಿನಾಯಕ ದಾಮೋದರ್ ಸಾವರ್ಕರ್  ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ  ಸಮನ್ಸ್ ನೀಡಿದೆ. ಅಕ್ಟೋಬರ್ 23 ರಂದು ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ ಹಿಂದುತ್ವದ ಐಕಾನ್ ವೀರ್ ಸಾವರ್ಕರ್ ವಿರುದ್ಧ ಕಾಂಗ್ರೆಸ್ ನಾಯಕ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

   ವೀರ್ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಥಳಿಸಿರುವ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಅವರು “ಹಿಂಸಾಚಾರವನ್ನು ನಡೆಸಲು ಸಂತೋಷವಾಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

 
   ಸಾವರ್ಕರ್ ಅವರನ್ನು ಹಲವಾರು ವರ್ಷಗಳಿಂದ ರಾಹುಲ್ ಗಾಂಧಿ ಪದೇ ಪದೇ ಮಾನಹಾನಿ ಮತ್ತು ನಿಂದನೆ ಮಾಡುತ್ತಿದ್ದಾರೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. “ಅಂತಹ ಒಂದು ಸಂದರ್ಭದಲ್ಲಿ, ಮಾರ್ಚ್ 5, 2023 ರಂದು, ರಾಹುಲ್ ಗಾಂಧಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಾಗರೋತ್ತರ ಕಾಂಗ್ರೆಸ್‌ನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಅವರು ಉದ್ದೇಶಪೂರ್ವಕವಾಗಿ ಸಾವರ್ಕರ್ ವಿರುದ್ಧ ಆರೋಪಗಳನ್ನು ಮಾಡಿದರು. ಅದು ಸುಳ್ಳು ಎಂದು ತಿಳಿದಿದ್ದರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಅವರು ಹೀಗೆ ಮಾಡಿದ್ದಾರೆ ಎಂದು” ದೂರಿನಲ್ಲಿ ಸತ್ಯಕಿ ಸಾವರ್ಕರ್ ಹೇಳಿದ್ದಾರೆ.
   ಕಳೆದ ತಿಂಗಳು ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಲಾಗಿತ್ತು. ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಅಮೋಲ್ ಶಿಂಧೆ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸತ್ಯಕಿ ಸಾವರ್ಕರ್ ಪರವಾಗಿ ವಾದ ಮಂಡಿಸುತ್ತಿರುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್, ಕಾಂಗ್ರೆಸ್ ನಾಯಕನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದ್ದು, ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಅವರ ಉಪಸ್ಥಿತಿ ಅಗತ್ಯವಾಗಿದೆ ಎಂದು ಹೇಳಿದರು.