ನವದೆಹಲಿ:
ಸರ್ಕಾರ ರಚನೆಗೆ ಮೈತ್ರಿಕೂಟದ ಸಂಖ್ಯೆಯನ್ನು ಹೆಚ್ಚಿಸಲು ಟಿಡಿಪಿ ಅಥವಾ ಜೆಡಿಯು ಅನ್ನು ಸಂಪರ್ಕಿಸುವ ಬಗ್ಗೆ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನೂ ಯಾವುದೇ ಚರ್ಚೆಯಾಗಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸಲು ಜನತಾ ದಳ (ಯುನೈಟೆಡ್) (ಜೆಡಿಯು) ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲು ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ಮುನ್ನ ಪವಾರ್ ಈ ಹೇಳಿಕೆ ನೀಡಿದ್ದಾರೆ.
ಮೋದಿ ಜನಪ್ರಿಯತೆ ಮೇಲೆಯೇ ಚುನಾವಣೆ ಎದುರಿಸಿದ್ದ ಬಿಜೆಪಿ, ಮೂರು ಹಿಂದಿ ರಾಜ್ಯಗಳಲ್ಲಿ ಹೀನಾಯವಾಗಿ ಸೋತಿದ್ದರೂ ಸಹ ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆಯಲ್ಲಿ ಬಹುಮತ ಪಡೆಯುವ ಮೂಲಕ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ.