ಸಿಎಂ ವಿರುದ್ಧ ಗರಂ ಆದ ಕೇಂದ್ರ ಸಚಿವ ಶೇಖಾವತ್‌

ನವದೆಹಲಿ :

    ಮೇಕೆದಾಟು ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ಗಜೇಂದ್ರ ಸಿಂಗ್ ಶೇಖಾವತ್ ಟ್ವಿಟರ್​ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

    ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

    ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.

    ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು  ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ.

    ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

   ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ