ಮಂಗಳೂರು
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಿರು ಸೇತುವೆ ಕುಸಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಎಂಜಿರ ಎಂಬಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಮಳೆಯಾಗುತ್ತಿದ್ದು, ಮಳೆಗೆ ನೀರು ಹರಿದು ಎಂಜಿರದಲ್ಲಿ ನಿರ್ಮಾಣ ಮಾಡಿದ ಕಿರು ಸೇತುವೆ ಕುಸಿದು ಬಿದ್ದಿದೆ ಎನ್ನಲಾಗಿದೆ.
ಕಳೆದ ರಾತ್ರಿ ಈ ಅನಾಹುತ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿದ್ದ ಕಿರು ಸೇತುವೆ ಕುಸಿದು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಕಳಪೆ ಕಾಮಗಾರಿಯ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಸೇತುವೆ ಕುಸಿತದಿಂದ ಕಳಪೆ ಕಾಮಗಾರಿ ಸಾಬೀತಾಗಿದೆ ಎಂದು ವಾದಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದು, ಎಂಜಿರದ ಕಿರು ಸೇತುವೆ ಕುಸಿದು ಬೀಳಲು ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ