ಶಿವಮೊಗ್ಗ:
ರಾಜ್ಯದಲ್ಲಿ ಕಾಡುಪ್ರಾಣಿ- ಮಾನವ ಮುಖಾಮುಖಿಯಿಂದ ಜೀವಹಾನಿ ಸಂಭವಿಸಿದ ಇನ್ನೊಂದು ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಭದ್ರಾವತಿ ತಾಲೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಕಾಡಾನೆ ಏಕಾಏಕಿ ನಡೆಸಿದ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚನ್ನಗಿರಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
