
ಶಿವಮೊಗ್ಗ: ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ರಾಜ್ಯದಲ್ಲಿ ಅವಧಿಗೂ ಮುನ್ನವೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ,ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬದಲಾವಣೆಯಾಗಿ ಯಾರೇ ಮುಖ್ಯಮಂತ್ರಿಯಾದರೂ ಅದೊಂದು ತಾತ್ಕಾಲಿಕ ವ್ಯವಸ್ಥೆ ಅಷ್ಟೇ. ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಇರಲ್ಲ ಅವಧಿಗೂ ಮುನ್ನವೆ ಚುನಾವಣೆ ನಡೆಯಲಿದೆ ಎಂದರು.
ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಗಮದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬದಲಿಸಲು ಮುಂದಾಗಿದೆ ಎಂದು ಹೇಳಿದರು. ದೆಹಲಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಸಭೆಯಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲಿನ ದುರಾಡಳಿತ ಎಲ್ಲವನ್ನೂ ಗಣನೆಗೆ ತೆಗೆದುಕೊಂಡು ಮುಖ್ಯಮಂತ್ರಿಯನ್ನು ಬದಲಿಸುವ ತೀರ್ಮಾನ ಮಾಡಿದೆ. ಸಿದ್ಧರಾಮಯ್ಯ ನಂತರ ಯಾರೇ ಮುಖ್ಯಮಂತ್ರಿಯಾದರೂ ಸರ್ಕಾರ ಸಲೀಸಾಗಿ ಸಾಗುವುದಿಲ್ಲ. ಆರಂಭದಲ್ಲೇ ಗೊಂದಲಗಳು ತಾರಕ್ಕಕೇರುತ್ತವೆ ಎಂದರು.ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಸಾಲ ೧೦ ಲಕ್ಷ ಕೋಟಿ ರೂ. ಗಳಿಗೆ ಏರಿಕೆಯಾಗಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಅವರು ದೂರಿದರು.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಷ್ಟು ಸುಲಭವಾಗಿ ರಾಜೀನಾಮೆ ನೀಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಏನೇ ಇರಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.








