ಮೈಸೂರು
ಮುಡಾ ಹಗರಣ ಸಂಬಂಧ ತನಿಖೆ ಚುರುಕುಗೊಳಿಸಲು ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಸೋಮವಾರ ನೋಟಿಸ್ ನೀಡಿದ್ದಾರೆ. ಮತ್ತೊಂದೆಡೆ, ಉಪಚುನಾವಣೆ ಪ್ರಚಾರವೂ ತೀವ್ರಗೊಂಡಿದೆ. ಈ ಸಂದರ್ಭದಲ್ಲೇ ಸಿಎಂ ವಿಚಾರಣೆಗೆ ಲೋಕಾಯುಕ್ತ ಮುಂದಾಗಿದೆ. ಅದರಂತೆ, ನವೆಂಬರ್ 6ರಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನ ಬಲವಾಗಲು ಕಾರಣ, ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿ. ಸೋಮವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನವೆಂಬರ್ 6ರ ಅವರ ದಿನದ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ವೇಳಾಪಟ್ಟಿ ಪ್ರಕಾರ ನವೆಂಬರ್ 6ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ವಿವಿಧ ಗ್ರಾಮಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಸಿಎಂ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಎಂಬ ಅನುಮಾನ ಮೂಡಿದೆ.
ಸಿದ್ದರಾಮಯ್ಯ ಶಾಸಕರಾಗಿ, ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಮುಖ್ಯಮಂತ್ರಿ ಆದವರು. ಸುದೀರ್ಘ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕ ಅಂಟಿಸಿಕೊಂಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ಎದುರಿಸಿರಲಿಲ್ಲ. ಇದೀಗ ಮುಡಾ ಸೈಟ್ ವಿಚಾರದಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಮೊದಲ ಬಾರಿ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.
ಈ ಮಧ್ಯೆ, ಶಿಗ್ಗಾಂವಿ ಉಪಚುನಾವಣಾ ಪ್ರಚಾರ ವೇಳೆ ಸೋಮವಾರ ಹುರುಳಿಕುಪ್ಪೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನ ಇಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ.