ಮಹದಾಯಿ ಯೋಜನೆಗೆ ಅನುಮತಿ : ಕನ್ನಡಿಗರಿಗೆ ದ್ರೋಹ ಬಗೆದ ಕೇಂದ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:

    ಮಹದಾಯಿ ಯೋಜನೆಗೆ  ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ  ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ, ಈ ಅನ್ಯಾಯದ ವಿರುದ್ಧ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

   ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ತಿಳಿಸಿರುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.

   2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಶಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

   ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ಧ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ.

   ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Recent Articles

spot_img

Related Stories

Share via
Copy link