ಮೋದಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಸಿದ್ದರಾಮಯ್ಯ

ಬೆಂಗಳೂರು:

    ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನೆ ಮಾಡಿದ್ದಾರೆ.

    ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ಮೋದಿ ಅವರು ಇಂದು ಕಲಬುರಗಿಗೆ ಭೇಟಿದ್ದು, ಈ ನಡುವಲ್ಲೇ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕಕ್ಕೆ ಪ್ರಧಾನಿ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಯಾಕೆ ಮೌನವಾಗಿದೆ?

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ.

   ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು. ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ ಬಿಜೆಪಿ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿ ಮೋದಿಯವರೇ?

    ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ.

    ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಾನು ಒತ್ತಾಯಿಸುತ್ತೇನೆಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link
Powered by Social Snap