ಬೆಂಗಳೂರು:
ರಾಜ್ಯ ಮಾತ್ರವಲ್ಲ ದೇಶ ರಾಜಕೀಯದಲ್ಲೇ ಸಂಚಲನ ಮೂಡಿಸಿದ ಮುಡಾ ಹಗರಣ ದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತನಿಖೆ ವೇಳೆ ಕಂಡು ಬಂದಿದೆ. ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗುವುದು ಎಂದು ಮೂಲಗಳು ತಿಳಿಸಿವೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ (ಜ. 27) ಕೋರ್ಟ್ಗೆ ಸಲ್ಲಿಸಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.ಮುಡಾ ಹಗರಣ ಸಂಬಂಧ ಮತ್ತೊಂದೆಡೆ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಜ. 27ರಂದು ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.
ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪತ್ನಿ ಬಿ.ಎಂ.ಪಾರ್ವತಿ ಅವರ ಹೆಸರಿನಲ್ಲಿ 14 ನಿವೇಶನಗಳಿಗೆ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.