ಬೆಂಗಳೂರು
2023 ರಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಸಂಧಾನ ಸಭೆಯ ಬಳಿಕ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಿದ್ರೆ, ಡಿ ಕೆ ಶಿವಕುಮಾರ್ ಗೆ ಡಿಸಿಎಂ ಸ್ಥಾನವನ್ನ ನೀಡಿತ್ತು.
ಇನ್ನೂ ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ ಎನ್ನಲಾಗಿದ್ದು, ಲೋಕಸಭಾ ಚುನಾವಣೆಯ ಬಳಿಕ ಅಧಿಕಾರ ಹಂಚಿಕೆಯಾಗಲಿ ಎಂಬ ಮಾತುಗಳು ಕೇಳಿಬಂದಿದ್ದು, ಇದೀಗ 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಚಿವ ಎಂ. ಬಿ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತವಾಗಿ ಬ್ಯಾಟಿಂಗ್ ಬೀಸಿದ್ದಾರೆ.
ಈ ಕುರಿತು ಸೋಮವಾರ ಮೈಸೂರಿನಲ್ಲಿ ಎಂ ಬಿ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಎಐಸಿಸಿ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕವೂ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆಯೇ ನಡೆದಿಲ್ಲ.
ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದರು.
ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಪದೇ ಪದೇ ಮಾತನಾಡಲ್ಲ, ನಿನ್ನೆ (ಸೋಮವಾರ) ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು. ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದಾರೋ ನಾನು ಅದನ್ನೆ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಪವರ್ ಸ್ಟೇರಿಂಗ್ ಶೇರಿಂಗ್ ಇಲ್ಲ, ಅದು ಇದ್ರೆ ಜನರ ಜೊತೆ ಮಾತ್ರ ಅಂತ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ, ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನ ಅಷ್ಟೇ ನಾನು ಹೇಳಿದ್ದು, ಪವರ್ ಸ್ಟೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು ನಾನು ಅದನ್ನೆ ಹೇಳಿದ್ದೇನೆ ಎಂದು ನೂತನ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ