ಶಿರಾ : ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಶಾಸಕರ ಸೂಚನೆ

 ಶಿರಾ : 

      ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು ಈ ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡ ಎಚ್ಚರಿಸಿದರು.

      ನಗರದ ತಹಸೀಲ್ದಾರ್ ಕಛೇರಿಯಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ತಾಲ್ಲೂಕು ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟದಿಂದ ಕೂಲಿ ಮಾಡಿ ಬದುಕುವ ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿವೆ. ದುಡಿದ ಕೂಲಿ ಹಣ ಕುಟುಂಬಕ್ಕೂ ತಲುಪದಂತಾಗಿದೆ. ಈ ಕೂಡಲೆ ಅಂತಹ ಅಕ್ರಮ ಮದ್ಯ ಮಾರಾಟದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

      ಗ್ರಾಮೀಣ ಭಾಗದಿಂದ ನಗರಕ್ಕೆ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸುರಕ್ಷಿತವಾಗಿ ಗ್ರಾಮಗಳಿಗೆ ಹಿಂದಿರುಗಲು ಮತ್ತು ಶಾಲೆಗಳಿಗೆ ಬರಲು ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

      ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಾತ್ರಿ ಗಸ್ತನ್ನು ಹೆಚ್ಚಿಸಿಕೊಳ್ಳುವಂತೆ ಆರಕ್ಷಕ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಯಿತಲ, ಪ್ರತಿ ಗ್ರಾಮ ಹಾಗೂ ನಗರದಲ್ಲಿ ಜನ ಜಾಗೃತಿಸಭೆ ನಡೆಸಲು ಸಲಹೆ ನೀಡಲಾಯಿತು. ತಹಶೀಲ್ದಾರ್ ಮಮತಾ, ಗ್ರಾಮಾಂತರ ಸಿ.ಪಿ.ಐ. ರವಿಕುಮಾರ್, ಪೌರಾಯುಕ್ತ ಪರಮೇಶ್ವರಪ್ಪ, ಪಿ.ಎಸ್.ಐ. ಸಿದ್ಧಾರ್ಥ, ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ