ಶಿರಾ : ಉಪ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ!!

ತುಮಕೂರು : 

     ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯು ನವೆಂಬರ್ 10ರಂದು ನಡೆಯಲಿದ್ದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾಧಿಕಾರಿ ಡಾ: ಕೆ. ನಂದಿನಿ ದೇವಿ ತಿಳಿಸಿದ್ದಾರೆ.

      ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿಂದು ಚುನಾವಣಾ ಮತ ಎಣಿಕೆ ನಡೆಸಲು ಆಗುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

      ನವೆಂಬರ್ 10ರಂದು ಬೆಳಿಗ್ಗೆ 8 ಗಂಟೆಗೆ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತ ಎಣಿಕೆ ಯಂತ್ರಗಳ ಮತ ಎಣಿಕೆಗೆ 14 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬ ಎಣಿಕೆ ಸೂಪರ್‍ವೈಸರ್, ಒಬ್ಬ ಎಣಿಕೆ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರ್‍ನ್ನು ನೇಮಕ ಮಾಡಲಾಗಿದೆ. ಅಂಚೆ ಮತಯಂತ್ರ ಹಾಗೂ ಸರ್ವೀಸ್ ವೋಟ್‍ಗಳ ಎಣಿಕೆಯು 4 ಟೇಬಲ್‍ಗಳಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.

      ಸುಮಾರು 24 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಟೇಬಲ್‍ಗೆ ಒಬ್ಬ ಅಭ್ಯರ್ಥಿಗೆ ಒಬ್ಬ ಏಜೆಂಟ್‍ನಂತೆ ಹಾಜರಿರಲು ಅವಕಾಶ ನೀಡಲಾಗುವುದು. ಈಗಾಗಲೇ ಮತ ಎಣಿಕೆ ಏಜೆಂಟರುಗಳಿಗೆ ಪಾಸ್ ವಿತರಿಸಲಾಗಿದೆ. ಪಾಸ್‍ಗಳನ್ನು ತಂದವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳಿಗೆ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಎಣಿಕಾ ಕೇಂದ್ರದ ಆವರಣದಲ್ಲಿ ಅಭ್ಯರ್ಥಿಗಳ ಕೊಠಡಿಯನ್ನು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

    ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಕ್ಯಾಮೆರಾ, ಮತ್ತಿತರೆ ವಸ್ತುಗಳನ್ನು ತರಲು ಅವಕಾಶವಿರುವುದಿಲ್ಲ. ಮಾಧ್ಯಮ ಕೇಂದ್ರಕ್ಕೆ ಆಗಮಿಸುವ ಮಾಧ್ಯಮ ಪ್ರತಿನಿಧಿಗಳಿಗೆ ಮೊಬೈಲ್ ತರಲು ವಿನಾಯತಿ ನೀಡಲಾಗಿದೆ ಎಂದ ಅವರು, ಮತ ಎಣಿಕಾ ಫಲಿತಾಂಶವನ್ನು ವೀಕ್ಷಿಸಲು ಮಾಧ್ಯಮ ಪ್ರತಿನಿಧಿಗಳ ಅನುಕೂಲಕ್ಕೆ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿ ಸುತ್ತಿನ ಮತ ಎಣಿಕೆ ಮಾಹಿತಿಯನ್ನು ಪ್ರದರ್ಶಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

     ಮತ ಎಣಿಕಾ ಕೇಂದ್ರಕ್ಕೆ ಮತ ಎಣಿಕೆಗೂ ಮುನ್ನ ಮತ್ತು ಮತ ಎಣಿಕೆಯ ನಂತರ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು. ಮತ ಎಣಿಕಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಶಿರಾ ತಹಶೀಲ್ದಾರ್ ಮಮತ, ಎಣಿಕಾ ಕೇಂದ್ರದ ನೋಡಲ್ ಅಧಿಕಾರಿ ಡಾ: ನಾಗೇಶ್ ಕುಮಾರ್, ನಿರ್ಮಿತಿ ಕೇಂದ್ರದ ರಾಜಶೇಖರ್ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap