ಬೆಂಗಳೂರು:
ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
SIT ವಿಚಾರಣೆಗೆ ಹಾಜರಾಗದೆ ಕಳೆದ 15-20 ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ (Bhavani Revanna) ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ಥೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಶುಕ್ರವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್‌ಐಟಿ ಎದುರು ಹಾಜರಾಗಿದ್ದಾರೆ.
ಮೂಲಗಳ ಪ್ರಕಾರ ಭವಾನಿ ರೇವಣ್ಣ ಸಂತ್ರಸ್ಥ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದು, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ತನ್ನ ಮಗನಿಗೆ ಸಹಾಯ ಮಾಡಲು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಪ್ರಸ್ತುತ ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ.
ಷರತ್ತು ವಿಧಿಸಿದ್ದ ಹೈಕೋರ್ಟ್
ಇನ್ನು ಇಂದು ಬೆಳಗ್ಗೆ ನಡೆದ ವಿಚಾರಣೆಯಲ್ಲಿ ‘ಶುಕ್ರವಾರ ಮಧ್ಯಾಹ್ನ 1 ಗಂಟೆಯೊಳಗೆ ಎಸ್‌ಐಟಿಯ ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಭವಾನಿ ರೇವಣ್ಣಗೆ ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠ ಸೂಚಿಸಿತ್ತು.
ಅಲ್ಲದೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣ ನಡೆದ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಮತ್ತು ಇಡೀ ಹಾಸನ ಜಿಲ್ಲೆಯ ವ್ಯಾಪ್ತಿಯೊಳಗೆ ಪ್ರವೇಶಿಸದಂತೆ ಹೈಕೋರ್ಟ್ ನಿರ್ಬಂಧಿಸಿದೆ.ಈ ಮಧ್ಯೆ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರ ಕಾರು ಚಾಲಕನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.