ಬೆಂಗಳೂರು:
ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.
ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಎಸ್ಎಂ. ಕೃಷ್ಣ ಅವರನ್ನು ಚಿಕಿತ್ಸೆಗಾಗಿ ಮೊದಲಿಗೆ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸತತ 15 ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಎಸ್.ಎಂ ಕೃಷ್ಣಾ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಅವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಎಸ್.ಎಂ.ಕೃಷ್ಣ ಅವರ ಆರೈಕೆಯಲ್ಲಿ ತೊಡಗಿದ್ದಾರೆ.
ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ, ಕೆಲ ಮಾಧ್ಯಮಗಳಲ್ಲಿ ಎಸ್‌ಎಂ ಕೃಷ್ಣ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು. ಈ ಹಿನ್ನೆಲೆ ಆಸ್ಪತ್ರೆ ವೈದ್ಯರು ನಿತ್ಯ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.