ಮೈಸೂರು:
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.
ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
‘ನನ್ನ ಹೋರಾಟಕ್ಕೆ ಇದು ಹಿನ್ನಡೆಯಾಗಿದೆ. ಆದರೆ, ನಾನು ವಿಚಲಿತನಾಗುವ ಅಥವಾ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಮತ್ತು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಪ್ರಯತ್ನವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಏನು ಉತ್ತರ ನೀಡಬೇಕು ಎಂಬುದಕ್ಕೆ ಅಗತ್ಯ ದಾಖಲೆಗಳ ಸಮೇತ ನಮ್ಮ ವಕೀಲರೊಂದಿಗೆ ಚರ್ಚಿಸುತ್ತೇನೆ. ನಂತರ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಸಿಬಿಐ ತನಿಖೆಗೆ ಕೋರುತ್ತೇವೆ ಎಂದರು.
ಲೋಕಾಯುಕ್ತ ಪೊಲೀಸರು ಆರೋಪಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ನಾವು ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೇವೆ. ಆದರೆ, ಹೈಕೋರ್ಟ್ ಯಾವ ಆಧಾರದ ಮೇಲೆ ಈ ಆದೇಶ ನೀಡಿದೆ ಎಂಬುದನ್ನು ನಾವು ತಿಳಿದುಕೊಳ್ಳುತ್ತೇವೆ. ಬಳಿಕ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಇಲಾಖೆಗಳ ಮೇಲೆ, ವಿಶೇಷವಾಗಿ ರಾಜ್ಯದ ತನಿಖಾ ಸಂಸ್ಥೆಗಳಾದ ಪೊಲೀಸ್ ಅಧಿಕಾರಿಗಳು ಮತ್ತು ಕರ್ನಾಟಕ ಲೋಕಾಯುಕ್ತ ಪೊಲೀಸರ ಮೇಲೆ ಅಧಿಕಾರ ಮತ್ತು ಪ್ರಭಾವವನ್ನು ಹೊಂದಿರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.
