ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಸೋಮಣ್ಣ…!

ಬೆಂಗಳೂರು: 

     ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ.

    ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದು ಏಳುಬೀಳುಗಳನ್ನು ಅರಿತಿದ್ದೇನೆ. ನನ್ನನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದರೆ, ಹಗಲಿರುಳು ಶ್ರಮಿಸಿ ಪಕ್ಷವನ್ನು ಸಂಘಟಿಸುತ್ತೇನೆ. ಇಲ್ಲವಾದಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

    ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೂರು ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರನ್ನು ಪಕ್ಷವು ಇನ್ನು ಘೋಷಿಸಿಲ್ಲ. ಇತ್ತೀಚೆಗಷ್ಟೇ ಸೋಮಣ್ಣ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

    ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 72 ವರ್ಷದ ಲಿಂಗಾಯತ ಸಮುದಾಯದ ನಾಯಕರಾಗಿರುವ ಸೋಮಣ್ಣ ಅವರು ಮೇ 10ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾದಿಂದ ಸಿದ್ದರಾಮಯ್ಯ ವಿರುದ್ಧ ಹಾಗೂ ಚಾಮರಾಜನಗರದಿಂದ ಮಾಜಿ ಸಚಿವ ಸಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಉಭಯ ಕ್ಷೇತ್ರಗಳಲ್ಲಿನ ಸೋಲು ಅವರನ್ನು ಹತಾಶರನ್ನಾಗಿ ಮಾಡಿದೆ.

 

    ರಾಜ್ಯದಲ್ಲಿನ ಪಕ್ಷದ ಪ್ರಮುಖ ನಾಯಕರಲ್ಲಿನ ಒಗ್ಗಟ್ಟಿನ ಕೊರತೆಯೇ ಸೋಮಣ್ಣ ಅವರ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ‘ತ್ಯಾಗ’ ಮಾಡಿದ್ದರಿಂದ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಪಕ್ಷವು ತನಗೆ ಈ ಮೂಲಕ ತನಗಾದ ನಷ್ಟವನ್ನು ತುಂಬಿಕೊಡಬೇಕು ಎಂದು ಸೋಮಣ್ಣ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap