ತುಮಕೂರು : ಸಿದ್ದಗಂಗಾ ಮಠದಲ್ಲಿ ಸೋಮಣ್ಣ ಶಕ್ತಿ ಪ್ರದರ್ಶನ

ತುಮಕೂರು:

    ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಚಿವರು ಭಾಗವಹಿಸಲಿದ್ದು, ಇದೇ ವೇಳೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಜಿಗಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಸೋಮಣ್ಣ ಅವರು 1 ಕೋಟಿ ರೂ. ವೆಚ್ಚದಲ್ಲಿ ಗುರುಭವನ ನಿರ್ಮಿಸಿ, ಮಠಕ್ಕೆ ಸಮರ್ಪಿಸಿದ್ದಾರೆ. ಸೋಮಣ್ಣ ಅವರನ್ನು ಕೇಸರಿ ಪಕ್ಷ ಕಡೆಗಣಿಸಿರುವ ಹಿನ್ನೆಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಈ ಸಂದರ್ಭ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಲಿಂಗಾಯತ ಸಮುದಾಯಕ್ಕೆ ಸೇರಿದ ಸೋಮಣ್ಣ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರ ಹಾಗೂ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಲಾಗಿತ್ತು. ಆದರೆ, ಎರಡೂ ಕಡೆಗಳಲ್ಲಿ ಅವರು ಸೋಲು ಅನುಭವಿಸಿದರು. ಈ ಹಿಂದೆ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ, ಪಕ್ಷದ ನಾಯಕತ್ವದಿಂದಲೇ ನನ್ನ ರಾಜಕೀಯ ಜೀವನ ಅತಂತ್ರವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
    ಸೋಮಣ್ಣ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು, ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರವನ್ನು ಇಂದೇ ಪ್ರಕಟಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
    ಸೋಮಣ್ಣ ಅವರು ಬಿಜೆಪಿಯ ಅತೃಪ್ತ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಮತ್ತು ರಮೇಶ್ ಜಾರಕಿಹೊಳಿ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರೊಂದಿಗೆ ಮಾಜಿ ಸಚಿವ ಹಾಗೂ ಹಿರಿಯ ದಲಿತ ಮುಖಂಡ ಅರವಿಂದ ಲಿಂಬಾವಳಿ ಕೂಡ ಪಕ್ಷದಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಪಕ್ಷದಲ್ಲಿನ ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.
   ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸೋಮಣ್ಣ ಒಂದೇ ಪ್ರದೇಶದವರಾಗಿದ್ದು, ಇಬ್ಬರೂ ಆತ್ಮೀಯ ಸಂಬಂಧ ಹೊಂದಿದ್ದಾರೆ. ಸೋಮಣ್ಣ ಅವರಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಸೇರಲು ಆಫರ್ ನೀಡಲಾಗಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿರುವುದರಿಂದ ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
   ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವಿನಲ್ಲಿ ಸೋಮಣ್ಣ ಪ್ರಮುಖ ಪಾತ್ರ ವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link