ಬೆಂಗಳೂರು:
ಜೆಡಿಎಸ್‌ನ ಎರಡನೇ ಅಭ್ಯರ್ಥಿಗಳ ಪಟ್ಟಿಯು ಮುಂದಿನ ಎರಡ್ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.
ಏಪ್ರಿಲ್/ಮೇನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 123ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ಸ್ಪಷ್ಟ ಬಹುಮತ ಪಡೆಯುವ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಪಂಚರತ್ನ ಯಾತ್ರೆಯ ಸಮಾರೋಪದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.
ಒಡೆದು ಆಳುವ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕೇಸರಿ ಪಕ್ಷವು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದರು.