ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ತೂಗುದೀಪ ಅವರಿಗೆ ಬಿಗ್ ಶಾಕ್ ನೀಡಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ದರ್ಶನ್ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.
ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ನಿಂದ ವೈದ್ಯಕೀಯ ಕಾರಣಗಳಿಗಾಗಿ ಆರು ವಾರಗಳವರೆಗೆ ಮಧ್ಯಂತರ ಜಾಮೀನು ಪಡೆದಿರುವ 47 ವರ್ಷದ ನಟ ದರ್ಶನ್ ಅವರು ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದಷ್ಟು ಬೇಗ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಬಿ ದಯಾನಂದ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಟ ದರ್ಶನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅಗತ್ಯ ದಾಖಲೆ, ಕಾಗದ ಪತ್ರಗಳನ್ನು ಸಿದ್ಧಪಡೆಸಿಕೊಳ್ಳಲಾಗುತ್ತಿದೆ. ಮುಖ್ಯವಾಗಿ ಚಾರ್ಜ್ಶೀಟ್ ಅನ್ನು ಭಾಷಾಂತರ ಮಾಡುವ ಕೆಲಸ ನಡೆದಿದೆ. ಶೀಘ್ರದಲ್ಲಿಯೇ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಆರೋಪಿಗಳಾಗಿದ್ದಾರೆ.