ತುಮಕೂರು-
ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೊದಲ ದಿನದ ಪರೀಕ್ಷೆ ಸುಲಲಿತವಾಗಿ ನಡೆಯಿತು.
ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 753 ಶಾಲೆಗಳ 35,069 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಆಸ್ಪದವಾಗದಂತೆ ಸಿಸಿಟಿವಿ ಅಳವಡಿಸಲಾಗಿದೆ.
ವಿದ್ಯಾರ್ಥಿಗಳು ಬೆಳಿಗ್ಗೆ 8.30ಕ್ಕೆ ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ತಮ್ಮ ನೋಂದಣಿ ಸಂಖ್ಯೆ ಹುಡುಕಾಟದಲ್ಲಿ ತೊಡಗಿದ್ದ ದೃಶ್ಯ ಸಾಮಾನ್ಯವಾಗಿತ್ತು.ಈ ಬಾರಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ಸಲುವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ನಗರ ಸೇರಿದಂತೆ ಜಿಲ್ಲೆಯ 10 ತಾಲ್ಲೂಕುಗಳಲ್ಲೂ 35,069 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು, ನಗರದ ಎಂಪ್ರೆಸ್ ಶಾಲೆ, ಸಿದ್ದಗಂಗಾ ಹೈಸ್ಕೂಲ್, ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯಾದ್ಯಂತ ಇರುವ 152 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉತ್ಸಾಹದಿಂದ ಆಗಮಿಸಿದ ದೃಶ್ಯ ಕಂಡು ಬಂತು.
ಬೆಳಿಗ್ಗೆ 8.30 ರಿಂದಲೇ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದೊಯ್ದು ನೋಂದಣಿ ಸಂಖ್ಯೆ ಹುಡುಕಾಟದಲ್ಲಿ ತೊಡಗಿದ್ದರು.ನಗರದ ಎಂಪ್ರೆಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದಿನಿಂದ ಆರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ. 15ರ ವರೆಗೆ ನಡೆಯಲಿದ್ದು, ಮೊದಲ ದಿನವಾದ ಇಂದು ಪ್ರಥಮ ಭಾಷೆ ಪರೀಕ್ಷೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರೆಗೆ ಸುಗಮವಾಗಿ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ