ಲೋಕಸಭಾ ಚುನಾವಣೆ : ಕರ್ನಾಟಕದ ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌

ಬೆಂಗಳೂರು:

    ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಸ್ಮೃತಿ ಇರಾನಿ ಮತ್ತು ನಿತಿನ್ ಗಡ್ಕರಿ ಸೇರಿದಂತೆ 40 ಮಂದಿ ಕರ್ನಾಟಕದ ಲೋಕಸಭೆ ಚುನಾವಣೆಗೆ ಬಿಜೆಪಿಯ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸ್ಧಾನ ಪಡೆದಿದ್ದಾರೆ.

   ಕರ್ನಾಟಕ ಬಿಜೆಪಿ ಘಟಕ ಶುಕ್ರವಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 10 ಮಂದಿ ಕೇಂದ್ರ ಸಚಿವರು, ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯ ನಾಯಕರು ಇದ್ದಾರೆ.

   ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಲಾದ ರಾಜ್ಯದ ಬಿಜೆಪಿಯ ಹಿರಿಯ ನಾಯಕರನ್ನು ಸ್ಟಾರ್ ಪ್ರಚಾರಕರು ಎಂದು ಹೆಸರಿಸಲಾಗಿದೆ. ಸ್ಟಾರ್ ಪ್ರಚಾರಕರು ರಾಜ್ಯದಲ್ಲಿ ಸಭೆಗಳು, ಸಮಾವೇಶಗಳು ಮತ್ತು ರೋಡ್‌ಶೋಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಬಿಜೆಪಿ ಪರ ಪ್ರಚಾರದ ಭಾಗವಾಗಲಿದ್ದಾರೆ.

   ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಹ ಸ್ಟಾರ್ ಪ್ರಚಾರಕರೆಂದು ಎಂದು ಹೆಸರಿಸಲಾಗಿದೆ.

   ಟಿಕೆಟ್ ವಂಚಿತ ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ.

   ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರನ್ನು ಸಹ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಯತ್ನಾಳ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಟೀಕಿಸಿದ್ದರು. 

   ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಹಿರಿಯ ಮುಖಂಡ ಸುಧಾಕರ ರೆಡ್ಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿಎನ್ ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಬಿ ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ ಸುನೀಲ್ ಕುಮಾರ್ ಇದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap