ಬೆಂಗಳೂರು:
ಡೆಂಗ್ಯೂ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಮಳೆಗಾಲ ಮುಗಿಯುವವರೆಗೆ ಕನಿಷ್ಠ ಎರಡು ತಿಂಗಳ ಕಾಲ ಎಲ್ಲರೂ ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.
ಸೋಮವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಈ ವರ್ಷ 68,000 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 25,000 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದೆರ ಈ ಬಾರಿ ಪ್ರಕರಣ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಹೇಳಿದರು.
ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರೀಕ್ಷೆಗಳ ಪರಿಣಾಮಕಾರಿ ರೀತಿಯಲ್ಲಿ ನಡೆಸಲಾಗುತ್ತಿದೆ. ಕೋವಿಡ್ ಮಾದರಿಯಲ್ಲಿ ನಿಯಂತ್ರಣ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜೊತೆಗೆ ಟಾಸ್ಕ್ ಫೋರ್ಸ್ ಕೂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ, ಅಂತಹ ಪ್ರದೇಶದಲ್ಲಿ ಹೆಚ್ಚಿನ ಡೆಂಗ್ಯೂ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಈಗಾಗಲೇ ಸಮಾರೋಪಾದಿಯಲ್ಲಿ ಕೆಲಸಗಳನ್ನು ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಎರಡು ಅಥವಾ ಮೂರಕ್ಕಿಂತ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡರೆ ಕ್ಲಿನಿಕ್‍ಗಳನ್ನು ತೆರೆಯಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಕರ್ನಾಟಕ, ತಮಿಳುನಾಡು ಮತ್ತು ಕೇರಳಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಉತ್ತರ ಭಾರತದಲ್ಲಿ ಈ ಪ್ರಕರಣಗಳು ಕಡಿಮೆ ಇದೆ ಎಂದು ಹೇಳಿದರು.
ಮಳೆಗಾಲವಾಗಿರುವುದರಿಂದ ಡೆಂಗ್ಯೂ ಪ್ರಕರಣ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಕಂದಾಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಸರಕಾರದ ಜೊತೆಗೆ ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು
