ಬೆಂಗಳೂರು:
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜೆ.ಸಿ.ನಗರ ಠಾಣೆ ಎದುರು ನಡೆದಿದೆ.
5 ಗ್ರಾಂ ಎಂಡಿಎಂಎ ಮಾದಕ ವಸ್ತು ಮಾತ್ರೆಗಳನ್ನು ಹೊಂದಿದ್ದ ಆಫ್ರಿಕನ್ ಪ್ರಜೆಯನ್ನು ಜೆ.ಸಿ.ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿಚಾರಣೆಗಾಗಿ ಕರೆ ತಂದಿದ್ದರು. ಆತ ಎದೆನೋವು ಮತ್ತು ಶೀತ ಇದೆ ಎಂದು ಹೇಳಿದ್ದು ತಕ್ಷಣವೇ ಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಪೊಲೀಸರ ದೌರ್ಜನ್ಯದಿಂದಲೇ ತಮ್ಮ ಸ್ನೇಹಿತ ಹಾಗೂ ಸಂಬಂಧಿ ಸಾವನ್ನಪ್ಪಿದ್ದಾನೆ. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿ ಆಫ್ರಿಕನ್ ಪ್ರಜೆಗಳು ಜೆ.ಸಿ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ವೇಳೆ ಆಫ್ರಿಕನ್ ಪ್ರಜೆಗಳು ತಪ್ಪಿಸಕೊಳ್ಳಲು ಪ್ರಯತ್ನಿಸಿದ್ದಾರೆ. ಕೆಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ