ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕುಡತಿನಿ ಬಳಿ ನಡೆದಿದೆ.
ಜಿಂದಾಲ್ ಕಾರ್ಖಾನೆಯ ಬಸ್ಸು ಕೆಲಸಕ್ಕಾಗಿ ಸಿಬ್ಬಂದಿಯನ್ನು ಜನರಲ್ ಶಿಫ್ಟ್ ಗಾಗಿ ಕರೆದುಕೊಂಡು ಹೋಗುತ್ತಿದ್ದಾಗ ಇಂದು ಮುಂಜಾನೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಸಂಡೂರು ತಾಲೂಕಿನ ಕುಡತಿನಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿನ ಡಿವೈಡರ್ ಡಿಕ್ಕಿ ಹೊಡೆದು ಬಳಿಕ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್‍ನಲ್ಲಿದ್ದ ಮೂವರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ ಪಲ್ಟಿಯಾದ ಕೂಡಲೇ ಎರ್ಮಜೆನ್ಸಿ ಡೋರ್ ಮೂಲಕ ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 50 ಜನರ ರಕ್ಷಣೆ ಮಾಡಲಾಗಿದ್ದು, ಸದ್ಯಕ್ಕೆ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಲಕನು ನಿದ್ದೆಯ ಮಂಪರಿನಲ್ಲಿದ್ದು, ಆತನ ಅಜಾಗರುಕತೆಯಿಂದ ಬಸ್ ಪಲ್ಟಿಯಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಕುಡತಿನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
