ಚಿತ್ರದುರ್ಗ :
2 ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹಳೆಹಳ್ಳಿ ಬಳಿ ನಡೆದಿದೆ.
ಮುಂಜಾನೆಯೇ ಜವರಾಯ ಅಟ್ಟಹಾಸ ಮೆರೆದಿದ್ದು, ತರಿಕೆರೆ ತಾಲ್ಲೂಕಿನ ಲಕ್ಕವಳ್ಳಿಯಿಂದ ಹೊಳಲ್ಕೆರೆ ತಾಲ್ಲೂಕಿನ ಕೊಂಡಾಪುರ ಗ್ರಾಮಕ್ಕೆ ಹೆಣ್ಣು ನೋಡಲು 2 ಕಾರುಗಳಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ಚಿತ್ರಹಳ್ಳಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ವೇಳೆ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಏಳು ಜನರು ಗಂಭೀರ ಗಾಯಗೊಂಡಿದ್ದಾರೆ. ಮೃತನನ್ನು ಲಕ್ಕವಳ್ಳಿ ಮೂಲದ ಶಂಭಪ್ಪ (48) ಎಂದು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ ಇಬ್ಬರು ಮಕ್ಕಳಿದ್ದು, ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
