ಬೆಂಗಳೂರು:
ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಡುವಂತೆ ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ.
ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವ ಡಿ.ಕೆ. ಶಿವಕುಮಾರ್, ರೈತರ ಮನವೊಲಿಸಲು ಯಶಸ್ವಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕೆಂದು ಬೆಳಗಾವಿಗೆ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದ್ದು, ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರಲ್ಲದೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ ಡಿ.ಕೆ. ಶಿವಕುಮಾರ್, ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಿದ್ದನ ಗೌಡರಿಗೆ ಎಳನೀರು ಕುಡಿಸುವ ಮೂಲಕ ಪ್ರತಿಭಟನೆ ಅಂತ್ಯಗೊಳಿಸುವಲ್ಲಿ ಯಶಸ್ವಿಯಾದರು.
ಜಾರಕಿಹೊಳಿ ಸಹೋದರರ ಮುನಿಸು:
ಕಳೆದ 10 ದಿನಗಳಿಂದ ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಆದ್ರೆ, ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಒಮ್ಮೆಯೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ. ಆದ್ರೆ, ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಇಂದು ಪ್ರತಿಭಟನಾ ಸ್ಥಳಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಮ್ಮೆ ಬೆಳಗಾವಿ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಕೈ ಮೇಲಾಗಿರುವುದರಿಂದ ಮತ್ತೆ ಜಾರಕಿಹೊಳಿ ಬ್ರದರ್ಸ್ ಸಚಿವರ ಮೇಲೆ ಮುನಿಸುಕೊಳ್ಳುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
