ಬೆಂಗಳೂರು :
ಮಿಂಟೋ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ನಡುವಿನ ಜಟಾಪಟಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜ್ಯದಾದ್ಯಂತ ಆಸ್ಪತ್ರೆಗಳ ಹೊರರೋಗಿ ವಿಭಾಗ (ಒಪಿಡಿ) ಬಂದ್ ಆಗಲಿದೆ.
ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೇ, ವೈದ್ಯರ ಮೇಲೆ ಹಲ್ಲೆ ಖಂಡಿಸಿ ಕಳೆದ ಮೂರು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಭಾರತೀಯ ವೈದ್ಯಕೀಯ ಸಂಘ(ಐಎಂಎ)ವೂ ಈಗ ಬೆಂಬಲ ನೀಡಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಆಗಿರಲಿದೆ ಎಂದು ಐಎಂಎ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ. ತುರ್ತು ಚಿಕಿತ್ಸಾ ವಿಭಾಗ ಮಾತ್ರ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ದಿನದಂದು ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ಕೆಲ ವೈದ್ಯರ ಮೇಲೆ ಹಲ್ಲೆ ಎಸಗಿತ್ತೆನ್ನಲಾದ ಕರ್ನಾಟಕ ರಕ್ಷಣಾ ವೇದಿಕೆ ವಿರುದ್ಧ ವೈದ್ಯರ ಪ್ರತಿಭಟನೆ ಆರನೇ ದಿನವೂ ಮುಂದುವರಿದಿದೆ.
ವೈದ್ಯರು ಪ್ರತಿಭಟನೆ ಕೈಬಿಡುವಂತೆ ಸರ್ಕಾರ ಮನವೊಲಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮಿಂಟೋ ಆಸ್ಪತ್ರೆಯ ವೈದ್ಯರ ಪ್ರತಿಭಟನೆಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈ ಜೋಡಿಸಿರುವುದರಿಂದ ನಾಳೆ ರೋಗಿಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ