ಬೆಂಗಳೂರು:
ಚಲಿಸುತ್ತಿದ್ದ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.
ಓಮ್ನಿಯಲ್ಲಿದ್ದ ಸುಂದರ್(25), ಸತೀಶ್(24), ವೆಂಕಟೇಶ್(28), ವಿಕಾಸ್(23) ಮೃತರು. ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು, ಫ್ಲವರ್ ಡೆಕೋರೇಶನ್ ಕೆಲಸ ಮಾಡುತ್ತಿದ್ದರು. ಮಧ್ಯರಾತ್ರಿ ಸುಮಾರು 1.30 ಗಂಟೆಗೆ ಅಪಘಾತ ಸಂಭವಿಸಿದೆ.
ಪ್ಲವರ್ ಡೆಕೋರೇಷನ್ ಮಾಡುತ್ತಿದ್ದ ಯುವಕರು ತಮ್ಮ ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಅಂತ ನಂದಿ ಬೆಟ್ಟದ ಕಡೆಗೆ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋವಾ ಕಾರಿನಲ್ಲಿದ್ದ ಮೂವರು ಸಹ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವೈಜ್ಞಾನಿಕವಾಗಿ ಹೆದ್ದಾರಿ ನಿರ್ಮಾಣ ಮಾಡಿರುವ ಹೆದ್ದಾರಿ ಪ್ರಾಧಿಕಾರದ ಅಧಿಕಾರಗಳ ಬೇಜವಾಬ್ದಾರಿತನವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಹೇಮಂತ್, ಅಜಿತ್, ರವಿ ಹಾಗೂ ಇನ್ನೋವಾ ಕಾರಿನಲ್ಲಿದ್ದ ಅವಿನಾಶ್, ಮನೋಜ್, ಹಿಂದೂಧರ್, ಮಧು ಎಂಬುವವರು ಗಾಯಗೊಂಡಿದ್ದು, ಅವರನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
