ಬೆಂಗಳೂರು:
ಗಣೇಶನ ಮಣ್ಣಿನ ಮೂರ್ತಿಗಳನ್ನು ಗರಿಷ್ಠ 5 ಅಡಿ ಎತ್ತರ ಸೀಮಿತಗೊಳಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಗಣೇಶ ಹಬ್ಬದಂದು ಪರಿಸರ ಸಂರಕ್ಷಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು , ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನಷ್ಟೇ ತಯಾರಿಸಲು ಅನುಮತಿ ನೀಡಬೇಕು. ಯಾವುದೇ ಕಾರಣಕ್ಕೂ ಮೂರ್ತಿಗಳನ್ನು 1 ತಿಂಗಳ ಕಾಲ ಕೂರಿಸುವುದಕ್ಕೆ ಅವಕಾಶ ನೀಡಬಾರದು. ಒಂದು ಪ್ರದೇಶದಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟವಾದ ಜಲಮೂಲಗಳನ್ನು ನಿಗದಿಪಡಿಸಬೇಕು. ವಿಸರ್ಜನೆ ವೇಳೆ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣಗಳನ್ನು ಪ್ರತ್ಯೇಕಿಸಬೇಕು. ನಗರದಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಕೆರೆ, ಕಲ್ಯಾಣಿಗಳನ್ನು ಗುರುತಿಸಿ ಅಲ್ಲಿಯೇ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು. ಹಾಗೆಯೇ ಈ ಕುರಿತು ಜನರಿಗೆ ಮಾಹಿತಿ ನೀಡಲು ಪ್ರಕಟಣೆ ಹೊರಡಿಸಲು ನಿರ್ದೇಶನ ನೀಡಿದ್ದಾರೆ.
ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವಾಗ ಪ್ರತಿ ಗಣೇಶ ಸಮಿತಿಯು ಕಡ್ಡಾಯವಾಗಿ ಮಾಲಿನ್ಯ ನಿಯಂತ್ರಣ ಮಂಡಳಿ, ಬಿಬಿಎಂಪಿ ಸೇರಿದಂತೆ ಇತರೆಡೆ ಸ್ಥಳೀಯ ನಗರಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿರಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
