ಹುಬ್ಬಳ್ಳಿ :
ಮಂಡ್ಯದಿಂದ ಸುಮಲತಾಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. “ಪಕ್ಷೇತರರಾಗಿ ಸ್ಪರ್ಧಿಸುವುದು ಸಂಪೂರ್ಣವಾಗಿ ಸುಮಲತಾ ಅವರಿಗೆ ಬಿಟ್ಟ ನಿರ್ಧಾರ. ಈ ಬಗ್ಗೆ ನಾನು ಏನನನ್ನೂ ಹೇಳಲು ಸಾಧ್ಯವಿಲ್ಲ,” ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಂಡ್ಯದಲ್ಲಿ ಜೆಡಿಎಸ್ ಸಂಸದರಿದ್ದಾರೆ. ಮೈತ್ರಿ ಒಪ್ಪಂದದ ಪ್ರಕಾರ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಾಧ್ಯವಿಲ್ಲ. ಹಾಗಾಗಿ ಈ ಕ್ಷೇತ್ರ ಜೆಡಿಎಸ್ಗೆ ಸೇರಬೇಕು. ಈ ಕ್ಷೇತ್ರ ಕಾಂಗ್ರೆಸ್ ವ್ಯಾಪ್ತಿಗೆ ಬರುವುದೇ ಇಲ್ಲ ಎಂದಾದ ಮೇಲೆ ಸುಮಲತಾಗೆ ಟಿಕೆಟ್ ನೀಡುವ ಪ್ರಶ್ನೆಯೇ ಬರುವುದಿಲ್ಲವಲ್ಲ,” ಎಂದು ಸುಮಲತಾ ಅಂಬರೀಶ್ ಸ್ಪರ್ಧೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, 3 – 4 ದಿನಗಳಲ್ಲಿ ಅಂತಿಮ ನಿರ್ಧಾರವಾಗಲಿದೆ. ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮೈತ್ರಿ ಹೆಚ್ಚು ಸ್ಥಾನ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ಕ್ಷೇತ್ರವನ್ನು ತಮಗೆ ಬಿಟ್ಟುಕೊಡಿ ಎಂದು ಸುಮಲತಾ ಪಟ್ಟು ಹಿಡಿದ್ದಾರೆ. ಆದರೆ, ಈಗ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ