ಮಂಗಳೂರು:
ಮಂಗಳೂರಿಗೆ ಬರದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮಂಗಳೂರು ಪೊಲೀಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ದಾಳಿಗೆ ಒಳಗಾಗಿದ್ದ ಇಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ತೆರಳುವವರಿದ್ದರು.
ಅವರಿಗೆ ನೋಟಿಸ್ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತರು ಡಿ.22ರ ರಾತ್ರಿ 12ರವರೆಗೂ ತಾವು ಮಂಗಳೂರಿಗೆ ಬರುವಂತಿಲ್ಲ. ತಾವು ಇಲ್ಲಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮಂಗಳೂರು ನಗರಕ್ಕೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ರೀತಿಯ ಸಾರಿಗೆ ಸೌಲಭ್ಯ ನಿಷೇಧಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಕರಾವಳಿ ಬೂದಿ ಮುಚ್ಚಿದ ಕೆಂಡವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ