ಮೈಸೂರು :
ಅಕ್ಟೋಬರ್ 17 ರಿಂದ ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಮೈಸೂರು ಜಿಲ್ಲಾಡಳಿತ ಆದೇಶಿಸಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಸರಾಗೆ ಸಾರ್ವಜನಿಕರನ್ನು ನಿಯಂತ್ರಿಸಲು ಮೈಸೂರು ಜಿಲ್ಲಾಡಳಿತ ಪ್ರವಾಸೋದ್ಯಮವನ್ನೇ ಬಂದ್ ಮಾಡಿದೆ. ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ಅಕ್ಟೋಬರ್ 14ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅಕ್ಟೋಬರ್ 17 ರಿಂದ ನವೆಂಬರ್ 1ರವರೆಗೆ ನಿರ್ಬಂಧಿಸಲಾಗಿದೆ.
ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಬಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.
ನವೆಂಬರ್ 1 ರವರೆಗೆ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದಸರಾ ರಜೆಗೆ ಮೈಸೂರಿಗೆ ಬರಬೇಡಿ ಎಂದು ಮೈಸೂರು ಜಿಲ್ಲಾಡಳಿತ ಮನವಿ ಮಾಡಿದೆ. ಇನ್ನು ನಿನ್ನೆ ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ